ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಬೆಸ್ಕಾಂ ಶಾಕ್ ನೀಡಿದ್ದು, ಜುಲೈ 1ರಿಂದ ಸ್ಮಾರ್ಟ್ ಮೀಟರ ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ.
ಕರ್ನಾಟಕದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಈ ನಿಯಮ ಜಾರಿಗೆ ತರಲಾಗಿದ್ದು, ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದೆ. ಇದೀಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಕೂಡ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, 2024ರ ಮಾರ್ಚ್ 6 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೊರಡಿಸಿರುವ ಮಾರ್ಗಸೂಚಿಯಂತೆ ಹಂತ ಹಂತವಾಗಿ ಸ್ಮಾರ್ಟ್ ಮೀಡರ್ ಅಳವಡಿಕೆ ಮಾಡಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.
ಈ ಸ್ಮಾರ್ಟ್ ಮೀಟರ್‌ಗಳುಜಿಪಿಆರ್‌ಎಸ್/ಆರ್‌ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ. ಇದರ ಅಳವಡಿಕೆಯಿಂದ ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಜನರು ಎಷ್ಟು ಸಮಯ ವಿದ್ಯುತ್ ಬಳಕೆ ಮಾಡಿದ್ದಾರೆ, ವೋಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ. ಅಷ್ಟೇ ಅಲ್ಲದೇ ಮೊಬೈಲ್ ನಂತೆಯೇ ವಿದ್ಯುತ್ ಗೂ ಕೂಡ ಮುಂಚಿತವಾಗಿ ತಮಗೆ ಎಷ್ಟು ದಿನ ಬೇಕೋ ಅಷ್ಟು ದಿನಗಳ ಕಾಲ ರಿಚಾರ್ಜ್ ಮಾಡಿ ವಿದ್ಯುತ್ ಸೌಲಭ್ಯ ಪಡೆಯಬಹುದಾಗಿದೆ.
